ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,
ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.
ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.
ನಾನು ತ್ರೋವದಲ್ಲಿದ್ದಾಗ ಕರ್ಪನ ಬಳಿ ನನ್ನ ಮೇಲಂಗಿಯನ್ನು ಬಿಟ್ಟು ಬಂದಿದ್ದೇನೆ. ನೀನು ನನ್ನ ಬಳಿಗೆ ಬರುವಾಗ ಅದನ್ನು ತೆಗೆದುಕೊಂಡು ಬಾ. ನನ್ನ ಪುಸ್ತಕಗಳನ್ನೂ ಮುಖ್ಯವಾಗಿ, ಕುರಿಚರ್ಮದಿಂದ ಮಾಡಿದ ಪುಸ್ತಕಗಳನ್ನು ತೆಗೆದುಕೊಂಡು ಬಾ.
ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.
ಯಾರಾದರೂ ನನಗೆ ತೊಂದರೆ ಮಾಡಲು ಪ್ರಯತ್ನಿಸಿದರೆ, ಪ್ರಭುವು ನನ್ನನ್ನು ರಕ್ಷಿಸುವನು. ಪ್ರಭುವು ನನ್ನನ್ನು ಸುರಕ್ಷಿತವಾಗಿ ತನ್ನ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಪ್ರಭುವಿಗೆ ಮಹಿಮೆಯಾಗಲಿ.