ಮೋಶೆಯು ನೆಬೋ ಬೆಟ್ಟವನ್ನು ಹತ್ತಿದನು. ಅವನು ಮೋವಾಬಿನ ಜೋರ್ಡನ್ ಕಣಿವೆಯಿಂದ ಪಿಸ್ಗಾ ಬೆಟ್ಟದ ಮೇಲಕ್ಕೆ ಬಂದನು. ಇದು ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ಜೆರಿಕೊ ಊರಿನ ಎದುರಿನಲ್ಲಿದೆ. ಯೆಹೋವನು ಮೋಶೆಗೆ ಗಿಲ್ಯಾದಿನಿಂದ ದಾನ್‌ವರೆಗಿದ್ದ ಎಲ್ಲಾ ಪ್ರದೇಶವನ್ನು ತೋರಿಸಿದನು.
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”
ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.