ನಾನು ಹೋಗಲೇಬೇಕೆಂದು ದೇವರು ನನಗೆ ತಿಳಿಸಿದ್ದರಿಂದ ವಿಶ್ವಾಸಿಗಳ ನಾಯಕರಾದ ಈ ಜನರ ಬಳಿಗೆ ಹೋದೆನು. ನಾವಷ್ಟೇ ಇದ್ದಾಗ, ಯೆಹೂದ್ಯರಲ್ಲದವರಿಗೆ ಸಾರುವ ಸುವಾರ್ತೆಯನ್ನು ಇವರಿಗೆ ತಿಳಿಸಿದೆನು. ನಾನು ಮೊದಲು ಮಾಡಿದ ಸೇವೆ ಮತ್ತು ಈಗ ಮಾಡುತ್ತಿರುವ ಸೇವೆ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಇವರಿಗೆ ಅರ್ಥವಾಗುವಂತೆ ನನ್ನ ಸೇವೆಯ ಬಗ್ಗೆ ತಿಳಿಸಿದೆನು.
(3-4) ತೀತನು ನನ್ನೊಂದಿಗಿದ್ದನು. ಅವನು ಗ್ರೀಕನಾಗಿದ್ದನು. ಆದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಯಾರೂ ಬಲವಂತ ಮಾಡಲಿಲ್ಲ. ಈ ಸಮಸ್ಯೆಗಳ ಬಗ್ಗೆ ನಾವು ಮಾತಾಡಲೇಬೇಕಿತ್ತು. ಏಕೆಂದರೆ ಕೆಲವು ಸುಳ್ಳು ಸಹೋದರರು ಬಂದು ನಮ್ಮ ಸಭೆಯೊಳಗೆ ಸೇರಿಕೊಂಡಿದ್ದರು. ಯೇಸು ಕ್ರಿಸ್ತನಲ್ಲಿ ನಮಗಿರುವ ಸ್ವಾತಂತ್ರ್ಯದ ಬಗ್ಗೆ ರಹಸ್ಯವಾಗಿ ತಿಳಿದುಕೊಳ್ಳಲು ಅವರು ಬಂದಿದ್ದರು.
ಆದರೆ ಪೇತ್ರನಂತೆ ನನಗೂ ದೇವರು ವಿಶೇಷವಾದ ಕೆಲಸವನ್ನು ಕೊಟ್ಟಿದ್ದಾನೆಂಬುದನ್ನು ಈ ನಾಯಕರು ತಿಳಿದುಕೊಂಡರು. ಯೆಹೂದ್ಯರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ಪೇತ್ರನಿಗೆ ಕೊಟ್ಟನು. ಆದರೆ ಯೆಹೂದ್ಯರಲ್ಲದವರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು.
ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.
ನಡೆದ ಸಂಗತಿ ಏನೆಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.
ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.
ಯೆಹೂದ್ಯರಾದ ನಾವು ನೀತಿವಂತರಾಗಲು ಕ್ರಿಸ್ತನ ಬಳಿಗೆ ಬಂದೆವು. ಆದ್ದರಿಂದ ನಾವು ಸಹ ಪಾಪಿಗಳಾಗಿದ್ದೇವೆಂಬುದು ಸ್ಪಷ್ಟವಾಗಿದೆ. ಕ್ರಿಸ್ತನು ನಮ್ಮನ್ನು ಪಾಪಿಗಳನ್ನಾಗಿ ಮಾಡುತ್ತಾನೆಂಬುದು ಇದರ ಅರ್ಥವೇ? ಇಲ್ಲ.
ನಾನು ಧರ್ಮಶಾಸ್ತ್ರಕ್ಕಾಗಿ ಜೀವಿಸುವುದನ್ನು ತೊರೆದುಬಿಟ್ಟೆನು. ನನ್ನನ್ನು ಧರ್ಮಶಾಸ್ತ್ರವೇ ಕೊಂದಿತು. ಈಗ ನಾನು ದೇವರಿಗಾಗಿ ಜೀವಿಸಬೇಕೆಂದು ಧರ್ಮಶಾಸ್ತ್ರದ ಪಾಲಿಗೆ ಸತ್ತುಹೋದೆನು. ನಾನು ಕ್ರಿಸ್ತನೊಂದಿಗೆ ಶಿಲುಬೆಗೇರಿಸಲ್ಪಟ್ಟೆನು.
ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.