ಆಗ ಭೂಮಿಯ ಮೇಲೆ ಯಾವ ಮರಗಿಡಗಳೂ ಇರಲಿಲ್ಲ. ಭೂಮಿಯ ಮೇಲೆ ಯಾವ ಸಸಿಯೂ ಬೆಳೆಯುತ್ತಿರಲಿಲ್ಲ; ಯಾಕೆಂದರೆ ಯೆಹೋವನು ಭೂಮಿಯ ಮೇಲೆ ಇನ್ನೂ ಮಳೆಯನ್ನು ಸುರಿಸಿರಲಿಲ್ಲ; ಭೂಮಿಯನ್ನು ಬೇಸಾಯ ಮಾಡಲು ಯಾರೂ ಇರಲಿಲ್ಲ.
ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು.
ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು.
ಭೂಮಿಯ ಮೇಲಿನ ಎಲ್ಲಾ ಪಶುಗಳಿಗೂ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೂ ಮತ್ತು ಕಾಡಿನಲ್ಲಿರುವ ಎಲ್ಲಾ ಕ್ರೂರಪ್ರಾಣಿಗಳಿಗೂ ಮನುಷ್ಯನು ಹೆಸರಿಟ್ಟನು. ಮನುಷ್ಯನು ಅನೇಕಾನೇಕ ಪ್ರಾಣಿಗಳನ್ನು ಮತ್ತು ಪಕ್ಷಿಗಳನ್ನು ನೋಡಿದನು. ಆದರೆ ಅವುಗಳಲ್ಲಿ ತನಗೆ ಸರಿಹೊಂದುವ ಸಹಕಾರಿಣಿಯನ್ನು ಅವನು ಕಾಣಲಿಲ್ಲ.
ಆಗ ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ. ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ. ಈಕೆಯ ದೇಹವು ನನ್ನ ದೇಹದಿಂದ ಬಂದಿದೆ. ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು. ಆದ್ದರಿಂದ ಈಕೆಗೆ ನಾನು ‘ಸ್ತ್ರೀ’ ಎಂದು ಹೆಸರಿಡುವೆ” ಎಂದನು.