1
|
ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ. |
2
|
ನಿಮ್ಮ ಸಭೆಗೆ ಒಬ್ಬನು ಬರುತ್ತಾನೆಂದು ನೆನೆಸಿರಿ. ಅವನು ಒಳ್ಳೆಯ ವಸ್ತ್ರಗಳನ್ನೂ ಬಂಗಾರದ ಉಂಗುರವನ್ನೂ ಧರಿಸಿರುತ್ತಾನೆ. ಅದೇ ಸಮಯಕ್ಕೆ ಕೊಳೆಯಾದ ಮತ್ತು ಹಳೆಯದಾದ ವಸ್ತ್ರಗಳನ್ನು ಧರಿಸಿರುವ ಒಬ್ಬ ಬಡವನೂ ಬರುತ್ತಾನೆ. |
3
|
ಒಳ್ಳೆಯ ವಸ್ತ್ರಗಳನ್ನು ಧರಿಸಿರುವವನಿಗೆ ವಿಶೇಷ ಗಮನವನ್ನು ನೀಡುವಿರಿ. “ಉತ್ತಮವಾದ ಈ ಸ್ಥಳದಲ್ಲಿ ನೀವು ಕುಳಿತುಕೊಳ್ಳಿ” ಎಂದು ಅವನಿಗೆ ಹೇಳುವಿರಿ. ಆದರೆ ಆ ಬಡ ಮನುಷ್ಯನಿಗೆ “ಅಲ್ಲೇ ನಿಂತುಕೊ!” ಎಂದಾಗಲಿ, “ನಮ್ಮ ಪಾದಗಳ ಬಳಿ ನೆಲದ ಮೇಲೆ ಕುಳಿತುಕೊ!” ಎಂದಾಗಲಿ ಹೇಳುವಿರಿ. |
4
|
ನೀವು ಮಾಡುತ್ತಿರುವುದೇನು? ಕೆಲವರನ್ನು ಇತರ ಜನರಿಗಿಂತ ಬಹಳ ಮುಖ್ಯರೆಂದು ಪರಿಗಣಿಸುತ್ತಿರುವಿರಿ. ನಿಮ್ಮ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ. |
5
|
ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ. |
6
|
ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ. |
7
|
ನಿಮ್ಮನ್ನು ತನ್ನವರನ್ನಾಗಿ ಮಾಡಿಕೊಂಡಿರುವ ಯೇಸುವಿನ ಶ್ರೇಷ್ಠವಾದ ಹೆಸರಿಗೆ ವಿರುದ್ಧವಾಗಿ ಕೆಟ್ಟಮಾತುಗಳನ್ನು ಆಡುವವರು ಶ್ರೀಮಂತರೇ. |
8
|
ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ. |
9
|
ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ. |
10
|
ಒಬ್ಬನು ದೇವರ ಎಲ್ಲಾ ಆಜ್ಞೆಗಳನ್ನು ಅನುಸರಿಸುತ್ತಿರಬಹುದು. ಆದರೆ ಅವನು ಒಂದು ಆಜ್ಞೆಗೆ ಅವಿಧೇಯನಾದರೆ ಅವನು ಧರ್ಮಶಾಸ್ತ್ರದ ಎಲ್ಲಾ ಆಜ್ಞೆಗಳನ್ನು ಮೀರಿದನೆಂಬ ಅಪರಾಧಕ್ಕೆ ಗುರಿಯಾಗುವನು. |
11
|
“ವ್ಯಭಿಚಾರ ಮಾಡಬಾರದು” ಎಂದು ದೇವರು ಹೇಳಿದನು. “ಕೊಲ್ಲಬಾರದು” ಎಂದೂ ಅದೇ ದೇವರು ಹೇಳಿದನು. ಹೀಗಿರಲಾಗಿ, ನೀವು ವ್ಯಭಿಚಾರವನ್ನು ಮಾಡದಿದ್ದರೂ ಯಾರನ್ನೇ ಆಗಲಿ ಕೊಂದರೆ, ದೇವರ ಇಡೀ ಧರ್ಮಶಾಸ್ತ್ರವನ್ನೇ ಉಲ್ಲಂಘಿಸಿದವರಾಗಿದ್ದೀರಿ. |
12
|
ಜನರನ್ನು ಬಿಡುಗಡೆ ಮಾಡುವ ಧರ್ಮಶಾಸ್ತ್ರದಿಂದಲೇ ನಿಮಗೆ ತೀರ್ಪಾಗುವುದು. ನೀವು ಕೇಳುವ ಮತ್ತು ಮಾಡುವ ಪ್ರತಿಯೊಂದರಲ್ಲಿಯೂ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ. |
13
|
ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು. |
14
|
ನನ್ನ ಸಹೋದರ ಸಹೋದರಿಯರೇ, ಒಬ್ಬ ವ್ಯಕ್ತಿಯು ತನ್ನಲ್ಲಿ ನಂಬಿಕೆಯಿದೆಯೆಂದು ಹೇಳಿಕೊಂಡರೂ ಅದನ್ನು ಕಾರ್ಯರೂಪಕ್ಕೆ ತರದಿದ್ದರೆ, ಅವನ ನಂಬಿಕೆಯಿಂದ ಪ್ರಯೋಜನವೇನೂ ಇಲ್ಲ. ಆ ರೀತಿಯ ನಂಬಿಕೆಯು ಅವನನ್ನು ರಕ್ಷಿಸಬಲ್ಲದೇ? ಇಲ್ಲ! |
15
|
ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ಅಥವಾ ಸಹೋದರಿಯಾಗಿರುವವಳಿಗೆ ಬಟ್ಟೆಗಳು ಬೇಕಾಗಿರಬಹುದು ಅಥವಾ ತಿನ್ನಲು ಆಹಾರ ಬೇಕಾಗಿರಬಹುದು. |
16
|
ಆದರೆ ನೀವು ಆ ವ್ಯಕ್ತಿಗೆ, “ದೇವರು ನಿನ್ನೊಂದಿಗಿರಲಿ! ಚಳಿಕಾಯಿಸಿಕೊಂಡು ತೃಪ್ತಿಯಾಗುವಷ್ಟು ಊಟ ಮಾಡು” ಎಂಬುದಾಗಿ ಹೇಳಿ ಬೇಕಾದವುಗಳನ್ನು ಅವನಿಗೆ ಕೊಡದೆ ಹೋದರೆ ನಿಮ್ಮ ಮಾತುಗಳಿಗೆ ಯಾವ ಬೆಲೆಯೂ ಇಲ್ಲ. |
17
|
ಇದೇ ನಿಯಮ ನಂಬಿಕೆಗೂ ಅನ್ವಯಿಸುತ್ತದೆ. ಕ್ರಿಯೆಯಿಲ್ಲದ ನಂಬಿಕೆಯು ತನ್ನಲ್ಲಿಯೇ ಸತ್ತುಹೋಗಿದೆ. |
18
|
ಆದರೆ ಯಾವನಾದರೂ, “ನಿನ್ನಲ್ಲಿ ನಂಬಿಕೆಯಿದೆ; ನನ್ನಲಿ ಕ್ರಿಯೆಗಳಿವೆ” ಎಂದು ವಾದಿಸಬಹುದು. ಅದಕ್ಕೆ ನನ್ನ ಉತ್ತರವೇನೆಂದರೆ ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ತೋರಿಸಲಾರೆ. ನಾನಾದರೊ ನನ್ನ ಒಳ್ಳೆಯ ಕಾರ್ಯಗಳ ಮೂಲಕ ನನ್ನ ನಂಬಿಕೆಯನ್ನು ನಿನಗೆ ತೋರಿಸುವೆ ಎಂದು ಹೇಳಬಹುದು. |
19
|
ಒಬ್ಬನೇ ದೇವರಿರುವನೆಂದು ನೀವು ನಂಬಿದ್ದೀರಿ. ಒಳ್ಳೆಯದು! ಆದರೆ ದೆವ್ವಗಳೂ ಅದನ್ನು ನಂಬುತ್ತವೆ ಮತ್ತು ಭಯದಿಂದ ನಡುಗುತ್ತವೆ. |
20
|
ಬುದ್ಧಿಹೀನರೇ, ಕ್ರಿಯೆಯಿಲ್ಲದ ನಂಬಿಕೆಯು ನಿಷ್ಪ್ರಯೋಜಕವೆಂದು ನಿಮಗೆ ತೋರಿಸಬೇಕೋ? |
21
|
ಅಬ್ರಹಾಮನು ನಮ್ಮ ಪಿತೃ. ಅವನು ತನ್ನ ಕ್ರಿಯೆಗಳಿಂದ ನೀತಿವಂತನಾದನು. ಅವನು ಯಜ್ಞವೇದಿಕೆಯ ಮೇಲೆ ತನ್ನ ಮಗನಾದ ಇಸಾಕನನ್ನು ದೇವರಿಗೆ ಅರ್ಪಿಸಿದನು. |
22
|
ಆದುದರಿಂದ ಅವನ ನಂಬಿಕೆ ಮತ್ತು ಅವನ ಕ್ರಿಯೆ ಒಟ್ಟಿಗೆ ಕಾರ್ಯ ಮಾಡಿದವು. ಅವನ ನಂಬಿಕೆಯು ಅವನ ಕ್ರಿಯೆಗಳಿಂದಲೇ ಪರಿಪೂರ್ಣಗೊಂಡಿತು. |
23
|
ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು. |
24
|
ಹೀಗಿರಲು ಒಬ್ಬನು ತನ್ನ ಕ್ರಿಯೆಗಳಿಂದ ನೀತಿವಂತನಾಗುತ್ತಾನೆ ಎಂಬುದು ಸ್ಪಷ್ಟವಾಗಿದೆ. ಒಬ್ಬನು ಕೇವಲ ನಂಬಿಕೆಯೊಂದರಿಂದಲೇ ನೀತಿವಂತನಾಗಲು ಸಾಧ್ಯವಿಲ್ಲ. |
25
|
ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು. |
26
|
ಒಬ್ಬ ವ್ಯಕ್ತಿಯ ದೇಹದಲ್ಲಿ ಆತ್ಮವಿಲ್ಲದಿದ್ದರೆ, ಅವನ ದೇಹವು ಸತ್ತದ್ದೇ. ಅದೇ ರೀತಿಯಲ್ಲಿ ಕ್ರಿಯೆಯಿಲ್ಲದ ನಂಬಿಕೆಯು ಸತ್ತದ್ದೇ. |
James 2:1 Kannada Language Bible Words basic statistical display
COMING SOON ...