ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಯಾವ ಕವಲೂ ತನ್ನಷ್ಟಕ್ಕೆ ತಾನೇ ಫಲಕೊಡಲಾರದು. ಅದು ದ್ರಾಕ್ಷಿಬಳ್ಳಿಯಲ್ಲಿ ನೆಲೆಗೊಂಡಿರಬೇಕು. ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮಷ್ಟಕ್ಕೇ ಫಲಕೊಡಲಾರಿರಿ. ನೀವು ನನ್ನಲ್ಲಿ ನೆಲೆಗೊಂಡಿರಬೇಕು.
“ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು.
ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.
“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.
ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.
“ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು.
ನಾನು ಬಂದು ಈ ಲೋಕದ ಜನರೊಂದಿಗೆ ಮಾತಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ನಾನು ಅವರೊಂದಿಗೆ ಮಾತಾಡಿದ್ದೇನೆ. ಆದ್ದರಿಂದ ತಮ್ಮ ಪಾಪಕ್ಕೆ ಅವರಿಗೆ ಯಾವ ನೆವವೂ ಇಲ್ಲ.
ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.
‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ [*ಅವರು … ದ್ವೇಷಿಸಿದರು ನೋಡಿರಿ: ಕೀರ್ತನೆ. 35:19; 69:4.] ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನಿಜವಾಗಲೆಂದು ಹೀಗಾಯಿತು.