1
|
ಸಬ್ಬತ್ ದಿನ ಕಳೆದಿತ್ತು. ಭಾನುವಾರ ಬೆಳಗಾಗುವುದರಲ್ಲಿತ್ತು. ಮಗ್ಧಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಹೋದರು. |
2
|
ಆಗ ಭೀಕರ ಭೂಕಂಪವಾಯಿತು. ಪ್ರಭುವಿನ ದೂತನೊಬ್ಬನು ಆಕಾಶದಿಂದ ಇಳಿದುಬಂದನು. ಆ ದೇವದೂತನು ಸಮಾಧಿಯ ಬಳಿಗೆ ಹೋಗಿ, ಸಮಾಧಿಯ ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಆ ಬಂಡೆಯ ಮೇಲೆ ಕುಳಿತುಕೊಂಡನು. |
3
|
ದೇವದೂತನು ಮಿಂಚಿನಂತೆ ಪ್ರಕಾಶಿಸುತ್ತಿದ್ದನು. ಅವನ ಬಟ್ಟೆಗಳು ಮಂಜಿನಂತೆ ಬಿಳುಪಾಗಿದ್ದವು. |
4
|
ಸಮಾಧಿಯನ್ನು ಕಾಯುತ್ತಿದ್ದ ಸೈನಿಕರು ದೇವದೂತನನ್ನು ಕಂಡು ಬಹಳವಾಗಿ ಹೆದರಿ ಭಯದಿಂದ ನಡುಗುತ್ತಾ ಸತ್ತಂತಾದರು. |
5
|
ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ. |
6
|
ಆದರೆ ಯೇಸು ಇಲ್ಲಿಲ್ಲ. ಆತನು ತಾನು ತಿಳಿಸಿದ್ದಂತೆಯೇ ಪುನರುತ್ಥಾನ ಹೊಂದಿದ್ದಾನೆ. ಬನ್ನಿ, ಆತನ ದೇಹವಿದ್ದ ಸ್ಥಳವನ್ನು ನೋಡಿ. |
7
|
ಬೇಗನೆ ಹೋಗಿ ಆತನ ಶಿಷ್ಯರಿಗೆ, ‘ಯೇಸು ಪುನರುತ್ಥಾನ ಹೊಂದಿದ್ದಾನೆ. ಆತನು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ನಿಮಗಿಂತ ಮುಂಚೆಯೇ ಆತನು ಅಲ್ಲಿರುತ್ತಾನೆ. ನೀವು ಆತನನ್ನು ಅಲ್ಲಿ ನೋಡುತ್ತೀರಿ’ ಎಂದು ಹೇಳಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ” ಎಂದನು. |
8
|
ಕೂಡಲೇ ಆ ಸ್ತ್ರೀಯರು ಭಯದಿಂದಲೂ ಸಂತೋಷದಿಂದಲೂ ಸಮಾಧಿಯಿಂದ ಹೊರಟರು. ನಡೆದ ಸಂಗತಿಯನ್ನು ಶಿಷ್ಯರಿಗೆ ತಿಳಿಸಲು ಅವರು ಓಡಿಹೋಗುತ್ತಿರಲು, |
9
|
ಯೇಸು ಅವರ ಮುಂದೆ ಪ್ರತ್ಯಕ್ಷನಾಗಿ, “ನಿಮಗೆ ಶುಭವಾಗಲಿ” ಎಂದನು. ಆ ಸ್ತ್ರೀಯರು ಯೇಸುವಿನ ಬಳಿಗೆ ಹೋಗಿ, ಆತನ ಪಾದಗಳನ್ನು ಹಿಡಿದುಕೊಂಡು ಆತನನ್ನು ಆರಾಧಿಸಿದರು. |
10
|
ಯೇಸು ಆ ಸ್ತ್ರೀಯರಿಗೆ, “ಹೆದರಬೇಡಿ, ನನ್ನ ಸಹೋದರರ ಬಳಿಗೆ ಹೋಗಿ ಗಲಿಲಾಯಕ್ಕೆ ಬರಲು ತಿಳಿಸಿರಿ. ಅವರು ನನ್ನನ್ನು ಅಲ್ಲಿ ಕಾಣುವರು” ಎಂದು ಹೇಳಿದನು. |
11
|
ಆ ಸ್ತ್ರೀಯರು ಶಿಷ್ಯರಿಗೆ ತಿಳಿಸಲು ಹೋದರು. ಇತ್ತ ಸಮಾಧಿಯನ್ನು ಕಾಯುತ್ತಿದ್ದ ಕೆಲವು ಸೈನಿಕರು ನಗರದೊಳಕ್ಕೆ ಹೋಗಿ ನಡೆದ ಸಂಗತಿಯನ್ನೆಲ್ಲಾ ಮಹಾಯಾಜಕರಿಗೆ ತಿಳಿಸಿದರು. |
12
|
ಆಗ ಮಹಾಯಾಜಕರು ಹಿರಿಯ ಯೆಹೂದ್ಯರನ್ನು ಭೇಟಿಮಾಡಿ ಚರ್ಚಿಸಿದರು ಮತ್ತು ಸೈನಿಕರಿಗೆ ಹೆಚ್ಚು ಹಣಕೊಟ್ಟು ಅವರಿಂದ ಸುಳ್ಳು ಹೇಳಿಸುವ ಉಪಾಯವನ್ನು ಮಾಡಿದರು. |
13
|
ಅವರು ಸೈನಿಕರಿಗೆ, “ರಾತ್ರಿ ವೇಳೆಯಲ್ಲಿ ನಾವು ನಿದ್ರಿಸುತ್ತಿದ್ದಾಗ ಯೇಸುವಿನ ಶಿಷ್ಯರು ಬಂದು ಅವನ ದೇಹವನ್ನು ಕದ್ದೊಯ್ದರೆಂದು ಜನರಿಗೆ ತಿಳಿಸಿರಿ. |
14
|
ಇದು ರಾಜ್ಯಪಾಲನಿಗೆ ಗೊತ್ತಾದರೂ ನಾವು ಅವನನ್ನು ಸಮಾಧಾನಪಡಿಸುತ್ತೇವೆ ಮತ್ತು ನಿಮಗೇನೂ ತೊಂದರೆಯಾಗದಂತೆ ನೋಡಿಕೊಳ್ಳತ್ತೇವೆ” ಎಂದು ಹೇಳಿದರು. |
15
|
ಸೈನಿಕರು ಹಣವನ್ನು ತೆಗೆದುಕೊಂಡು, ಅವರು ಹೇಳಿದಂತೆಯೇ ಮಾಡಿದರು. ಈ ಕಥೆಯು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿಕೊಂಡಿದೆ. |
16
|
ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೊರಟು ಯೇಸು ತಿಳಿಸಿದ್ದ ಬೆಟ್ಟಕ್ಕೆ ಬಂದರು. |
17
|
ಶಿಷ್ಯರು ಬೆಟ್ಟದ ಮೇಲೆ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು. ಆದರೆ ಕೆಲವು ಶಿಷ್ಯರು ಆತನೇ ನಿಜವಾದ ಯೇಸು ಎಂಬುದನ್ನು ನಂಬಲಿಲ್ಲ. |
18
|
ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ. |
19
|
ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ. |
20
|
ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ. ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು. |
Matthew 28:10 Kannada Language Bible Words basic statistical display
COMING SOON ...