“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.
ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.
(ಲೂಕ 6:43-44; 13:25-27) “ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.
ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ.
“ ‘ನಾನು ಪ್ರಭುವಿನವನು’ ಎಂದು ಹೇಳಿದ ಮಾತ್ರಕ್ಕೆ ಮನುಷ್ಯನು ಪರಲೋಕರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಿಲ್ಲ. ಪರಲೋಕದಲ್ಲಿರುವ ನನ್ನ ತಂದೆಯ ಇಷ್ಟದಂತೆ ಮಾಡುವವರೇ ಪರಲೋಕರಾಜ್ಯಕ್ಕೆ ಪ್ರವೇಶಿಸುವರು.
ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು.