1
|
ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಬಂದು ನನ್ನನ್ನೆಬ್ಬಿಸಿದನು. ನಾನು ನಿದ್ರೆಯಿಂದ ಎದ್ದೇಳುವವನಂತೆ ಇದ್ದೆನು. |
2
|
ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು. ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು. |
3
|
ಆ ಬೋಗುಣಿಯ ಬಳಿಯಲ್ಲಿ ಎರಡು ಆಲೀವ್ ಮರಗಳಿದ್ದವು. ಒಂದು ಬಲಬದಿಯಲ್ಲಿಯೂ ಇನ್ನೊಂದು ಎಡ ಬದಿಯಲ್ಲಿಯೂ ಇತ್ತು. ಈ ಮರಗಳು ದೀಪಗಳಿಗೆ ಬೇಕಾದ ಎಣ್ಣೆಯನ್ನು ತಯಾರು ಮಾಡುತ್ತಿದ್ದವು.” |
4
|
ಆಗ ನಾನು ನನ್ನ ಜೊತೆ ಮಾತನಾಡುತ್ತಿದ್ದ ದೂತನೊಡನೆ, “ಸ್ವಾಮಿ, ಇವುಗಳ ಅರ್ಥವೇನು?” ಎಂದು ಕೇಳಿದೆನು. |
5
|
ಅವನು ಹೀಗೆ ಹೇಳಿದನು: “ಈ ವಿಷಯಗಳು ಏನೆಂದು ನಿನಗೆ ತಿಳಿಯಲಿಲ್ಲವೇ?” ನಾನು “ಇಲ್ಲ” ಅಂದೆನು. |
6
|
ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ. |
7
|
ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.” |
8
|
ನನಗೆ ಯೆಹೋವನ ಸಂದೇಶವೂ ಸಹ ಹೀಗೆ ಹೇಳಿತು: |
9
|
“ಜೆರುಬ್ಬಾಬೆಲನು ನನ್ನ ಆಲಯದ ಅಸ್ತಿವಾರವನ್ನು ಹಾಕುವನು. ಜೆರುಬ್ಬಾಬೆಲನು ಆಲಯವನ್ನು ಕಟ್ಟಿ ಮುಗಿಸುವನು. ಆಗ ನೀವು ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಗೆ ನನ್ನನ್ನು ಕಳುಹಿಸಿದ್ದಾನೆಂದು ತಿಳಿಯುವಿರಿ. |
10
|
ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.” |
11
|
ಆಗ ಜೆಕರ್ಯನಾದ ನಾನು ಅವನಿಗೆ ಹೇಳಿದ್ದೇನೆಂದರೆ, “ನಾನು ದೀಪಸ್ತಂಭದ ಬಲಗಡೆಯಲ್ಲಿ ಒಂದು ಆಲೀವ್ ಮರವನ್ನೂ ಎಡಗಡೆಯಲ್ಲಿ ಇನ್ನೊಂದು ಆಲೀವ್ ಮರವನ್ನೂ ನೋಡಿದೆನು. ಇವುಗಳು ಏನನ್ನು ಸೂಚಿಸುತ್ತವೆ?” ಎಂದು ಕೇಳಿದೆನು. |
12
|
ತಿರಿಗಿ ನಾನು ಅವನಿಗೆ, “ನಾನು ಆ ಎರಡು ಬಂಗಾರದ ನಳಿಗೆಯ ಬದಿಯಲ್ಲಿ ಆಲೀವ್ ಮರದ ಎರಡು ಕೊಂಬೆಗಳನ್ನು ನೋಡಿದೆನು. ಅದರಿಂದ ಬಂಗಾರದ ಬಣ್ಣದ ಎಣ್ಣೆಯು ಹರಿಯುತ್ತಿತ್ತು. ಇವುಗಳ ಅರ್ಥವೇನು?” ಎಂದು ಕೇಳಿದೆನು. |
13
|
ಆಗ ದೇವದೂತನು ಹೇಳಿದ್ದೇನೆಂದರೆ, “ಇವು ಏನನ್ನು ಸೂಚಿಸುತ್ತವೆ ಎಂದು ನಿನಗೆ ತಿಳಿಯದೋ?” ಅದಕ್ಕೆ ನಾನು, “ಇಲ್ಲ” ಅಂದೆನು. |
14
|
ಆಗ ಅವನು, “ಈ ಪ್ರಪಂಚದಲ್ಲಿ ಯೆಹೋವನು ತನ್ನ ಸೇವೆಮಾಡಲು ಆರಿಸಿಕೊಂಡ ಇಬ್ಬರು ಮನುಷ್ಯರನ್ನು ಅವು ಪ್ರತಿನಿಧಿಸುತ್ತವೆ” ಅಂದನು. |
Zechariah 4:1 Kannada Language Bible Words basic statistical display
COMING SOON ...