ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೆ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ.
ಅವನ ಹೃದಯವು ಯೆಹೋವನ ಮಾರ್ಗಗಳಲ್ಲಿ ಆನಂದವನ್ನು ಕಂಡುಕೊಂಡಿತು. ಯೆಹೂದ ಪ್ರಾಂತ್ಯದಲ್ಲಿ ವಿಗ್ರಹಗಳ ಪೂಜಾಸ್ಥಳಗಳನ್ನೆಲ್ಲಾ ತೆಗೆದುಹಾಕಿಸಿ ಅಶೇರ ಸ್ತಂಭಗಳನ್ನು ಕಡಿದುಹಾಕಿಸಿ ಅವುಗಳನ್ನು ನಿರ್ಮೂಲ ಮಾಡಿದನು.
ತನ್ನ ಆಳ್ವಿಕೆಯ ಮೂರನೆಯ ವರುಷದಲ್ಲಿ ಯೆಹೂದದ ಎಲ್ಲಾ ಪಟ್ಟಣಗಳಿಗೆ ನಾಯಕರನ್ನು ಕಳುಹಿಸಿ ಜನರಿಗೆ ದೇವರ ವಿಧಿನಿಯಮಗಳು ಬೋಧಿಸಲ್ಪಡುವಂತೆ ಮಾಡಿದನು. ಆ ನಾಯಕರು ಯಾರೆಂದರೆ: ಬೆನ್ಹೈಲ್, ಓಬದ್ಯ, ಜೆಕರ್ಯನೆತನೇಲ್ ಮತ್ತು ಮೀಕಾಯ.
ಯೆಹೋಷಾಫಾಟನು ಅವರೊಂದಿಗೆ ಲೇವಿಯರನ್ನೂ ಕಳುಹಿಸಿದನು. ಅವರು ಯಾರೆಂದರೆ: ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ ಮತ್ತು ಟೋಬೀಯ. ಅವರೊಂದಿಗೆ ಕಳುಹಿಸಲ್ಪಟ್ಟ ಯಾಜಕರು ಯಾರೆಂದರೆ: ಎಲೀಷಾಮಾ ಮತ್ತು ಯೆಹೋರಾಮ.
ಫಿಲಿಷ್ಟಿಯರಲ್ಲಿ ಕೆಲವರು ಅವನಿಗೆ ಬೆಳ್ಳಿಬಂಗಾರಗಳ ಕಾಣಿಕೆಗಳನ್ನು ತಂದುಕೊಟ್ಟರು; ಅವನೊಬ್ಬ ಬಲಿಷ್ಠನಾದ ರಾಜನೆಂದು ಅವರು ತಿಳಿದುಕೊಂಡಿದ್ದರು. ಅರಬಿಯದ ಜನರು ಯೆಹೋಷಾಫಾಟನಿಗೆ ಪಶುಗಳ ಹಿಂಡುಗಳನ್ನು ತಂದುಕೊಟ್ಟರು. ಅವುಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳು ಮತ್ತು ಏಳು ಸಾವಿರದ ಏಳುನೂರು ಹೋತಗಳು ಇದ್ದವು.