ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಈ ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಈ ಹೊಸ ಜೀವನ ಕೊಡುತ್ತದೆ.
ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.
ದೇವರು ನಿಮ್ಮನ್ನು ಆರಿಸಿಕೊಂಡಿದ್ದಾನೆ ಮತ್ತು ನಿಮ್ಮನ್ನು ತನ್ನ ಪವಿತ್ರ ಜನರನ್ನಾಗಿಸಿದ್ದಾನೆ. ಆತನು ನಿಮ್ಮನ್ನು ಪ್ರೀತಿಸುತ್ತಾನೆ. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ಕ್ರಿಸ್ತನು ನೀಡುವ ಶಾಂತಿಯು ನಿಮ್ಮ ಆಲೋಚನಗಳನ್ನೆಲ್ಲ ತನ್ನ ಹತೋಟಿಯಲ್ಲಿಟ್ಟುಕೊಂಡಿರಲಿ. ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರಾದ್ದರಿಂದ ಶಾಂತಿಯಿಂದಿರಲು ಕರೆಯಲ್ಪಟ್ಟಿದ್ದೀರಿ. ಯಾವಾಗಲು ಕೃತಜ್ಞರಾಗಿರಿ.
ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.
ಸೇವಕರೇ, ಎಲ್ಲಾ ಕಾರ್ಯಗಳಲ್ಲಿಯೂ ನಿಮ್ಮ ಯಜಮಾನರಿಗೆ ವಿಧೇಯರಾಗಿರಿ. ಅವರ ಮೆಚ್ಚಿಕೆಯನ್ನು ಗಳಿಸುವುದಕ್ಕಾಗಿ ಅವರ ಕಣ್ಣೆದುರಿನಲ್ಲಿ ಮಾತ್ರ ಸೇವೆ ಮಾಡದಿರಿ. ನೀವು ಪ್ರಭುವಿಗೆ ಭಯಪಡುವುದರಿಂದ ನಿಮ್ಮ ಯಜಮಾನರಿಗೆ ಯಥಾರ್ಥವಾಗಿ ಸೇವೆ ಮಾಡಿರಿ.