ದೇವರು ಒಬ್ಬನಿಗೆ ಐಶ್ವರ್ಯವನ್ನು, ಆಸ್ತಿಪಾಸ್ತಿಯನ್ನು ಮತ್ತು ಘನತೆಯನ್ನು ಕೊಡುವನು. ಅವನು ತನಗೆ ಈಗ ಬೇಕಾಗಿರುವ ಮತ್ತು ಮುಂದೆ ಬೇಕಾಗುವ ಎಲ್ಲವನ್ನೂ ಹೊಂದಿರುವನು. ಆದರೆ ಅವುಗಳನ್ನು ಅನುಭವಿಸಲು ದೇವರು ಅವನಿಗೆ ಅವಕಾಶಕೊಡುವುದಿಲ್ಲ. ಮತ್ತೊಬ್ಬನು ಬಂದು ಎಲ್ಲವನ್ನೂ ತೆಗೆದುಕೊಳ್ಳುವನು. ಇದು ಸಹ ತುಂಬ ಕೆಟ್ಟದ್ದೂ ಅರ್ಥವಿಲ್ಲದ್ದೂ ಆಗಿದೆ.
ಒಬ್ಬನು ಬಹುಕಾಲ ಬದುಕಬಹುದು. ಅವನಿಗೆ ನೂರು ಮಂದಿ ಮಕ್ಕಳಿರಬಹುದು. ಆದರೆ ಅವನಿಗೆ ತೃಪ್ತಿಯೂ ಸತ್ತ ಮೇಲೆ ಉತ್ತರಕ್ರಿಯೆಯೂ ಇಲ್ಲದಿದ್ದರೆ ಹುಟ್ಟುವಾಗಲೇ ಸಾಯುವ ಮಗು ಅವನಿಗಿಂತಲೂ ಉತ್ತಮ.
(10-11) ಮನುಷ್ಯನು ಕೇವಲ ಮನುಷ್ಯನಾಗಿ ಸೃಷ್ಟಿಸಲ್ಪಟ್ಟಿದ್ದಾನೆ. ಅದರ ಬಗ್ಗೆ ವಾದಮಾಡುವುದರಿಂದ ಉಪಯೋಗವಿಲ್ಲ. ಅಲ್ಲದೆ ಮನುಷ್ಯನು ದೇವರೊಂದಿಗೆ ವಾದಮಾಡಲಾರನು. ಯಾಕೆಂದರೆ ದೇವರು ಮನುಷ್ಯನಿಗಿಂತಲೂ ಬಲಿಷ್ಠನಾಗಿದ್ದಾನೆ. ಆದ್ದರಿಂದ ವಾದವು ಕೇವಲ ನಿರರ್ಥಕವಾಗಿದೆ.