English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Hebrews Chapters

Hebrews 7 Verses

1 ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು.
2 ಅಬ್ರಹಾಮನು ಅವನಿಗೆ ತನ್ನಲ್ಲಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಸಾಲೇಮಿನ ರಾಜನಾದ ಮೆಲ್ಕಿಜೆದೇಕನೆಂಬ ಹೆಸರಿಗೆ ಎರಡು ಅರ್ಥಗಳಿವೆ. ಮೆಲ್ಕಿಜೆದೇಕನೆಂದರೆ, “ನೀತಿರಾಜ” ಎಂಬರ್ಥ. “ಸಾಲೇಮಿನ ರಾಜ”ನೆಂದರೆ “ಸಮಾಧಾನದ ರಾಜ” ಎಂದರ್ಥ.
3 ಮೆಲ್ಕಿಜೆದೇಕನ ತಂದೆತಾಯಿಗಳು ಯಾರೆಂಬುದಾಗಲಿ ಅವನು ಎಲ್ಲಿಂದ ಬಂದನೆಂಬುದಾಗಲಿ ಅವನು ಯಾವಾಗ ಹುಟ್ಟಿದನೆಂಬುದಾಗಲಿ ಅವನು ಯಾವಾಗ ಸತ್ತನೆಂಬುದಾಗಲಿ ಯಾರಿಗೂ ತಿಳಿದಿಲ್ಲ. ಅವನು ದೇವರ ಮಗನಂತೆ ಸದಾಕಾಲವೂ ಯಾಜಕನಾಗಿದ್ದಾನೆ.
4 ಮೆಲ್ಕಿಜೆದೇಕನು ಎಷ್ಟು ದೊಡ್ಡವನೆಂಬುದನ್ನು ಸ್ವಲ್ಪ ಆಲೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು, ಯುದ್ಧದಲ್ಲಿ ತಾನು ಜಯಿಸಿದ್ದರಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನು.
5 ಲೇವಿಯಕುಲದ ಜನರಲ್ಲಿ ಯಾಜಕರಾಗುವವರು ಯೆಹೂದ್ಯರಿಂದ ಹತ್ತನೆಯ ಒಂದು ಭಾಗವನ್ನು ಪಡೆಯಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ಯಾಜಕರು ತಮ್ಮ ಸ್ವಂತ ಜನರಿಂದಲೇ (ಯೆಹೂದ್ಯರು) ಅದನ್ನು ಸಂಗ್ರಹಿಸುತ್ತಾರೆ ಮತ್ತು ಅವರ ಜನರು ಅಬ್ರಹಾಮನ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
6 ಮೆಲ್ಕಿಜೆದೇಕನು ಲೇವಿಯರ ಕುಲಕ್ಕೆ ಸೇರಿದವನಾಗಿರಲಿಲ್ಲ. ಆದರೆ ಅವನು ಹತ್ತನೆ ಒಂದು ಭಾಗವನ್ನು ಅಬ್ರಹಾಮನಿಂದ ಪಡೆದನು. ದೇವರ ವಾಗ್ದಾನಗಳನ್ನು ಹೊಂದಿದ್ದ ಅಬ್ರಹಾಮನನ್ನು ಅವನು ಆಶೀರ್ವದಿಸಿದನು.
7 ಮುಖ್ಯನಾದ ವ್ಯಕ್ತಿಯು ಅಲ್ಪನಾದವನಿಗೆ ಆಶೀರ್ವಾದ ಮಾಡುತ್ತಾನೆಂಬುದು ಜನರೆಲ್ಲರಿಗೂ ತಿಳಿದಿರುವ ವಿಷಯ.
8 ಯಾಜಕರು ಹತ್ತನೆಯ ಒಂದು ಭಾಗವನ್ನು ಪಡೆಯುತ್ತಾರೆ. ಆದರೆ ಅವರು ಸ್ವಲ್ಪಕಾಲ ಜೀವಿಸಿದ್ದು ನಂತರ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ಹತ್ತನೆಯ ಒಂದು ಭಾಗವನ್ನು ಪಡೆದ ಮೆಲ್ಕಿಜೆದೇಕನು ಜೀವಂತನಾಗಿಯೇ ಇರುತ್ತಾನೆಂದು ಪವಿತ್ರ ಗ್ರಂಥವು ಹೇಳುತ್ತದೆ.
9 ಲೇವಿಯರು ಜನರಿಂದ ಹತ್ತನೆಯ ಒಂದು ಭಾಗವನ್ನು ತೆಗೆದುಕೊಳ್ಳುತ್ತಾರೆ. ಆದರೆ ಅಬ್ರಹಾಮನು ಮೆಲ್ಕಿಜೆದೇಕನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನೆಂದರೆ, ಲೇವಿಯೂ ಕೊಟ್ಟಂತಾಯಿತೆಂದು ಹೇಳಬಹುದು.
10 ಲೇವಿಯು ಇನ್ನೂ ಹುಟ್ಟಿರಲಿಲ್ಲ. ಆದರೆ ಮೆಲ್ಕಿಜೆದೇಕನು ಅಬ್ರಹಾಮನನ್ನು ಎದುರುಗೊಂಡಾಗ, ಲೇವಿಯು ತನ್ನ ಪೂರ್ವಿಕನಾದ ಅಬ್ರಹಾಮನ ದೇಹದಲ್ಲಿದ್ದನು.
11 ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.
12 ಬೇರೊಬ್ಬ ಯಾಜಕನು ಬಂದರೆ, ಆಗ ಧರ್ಮಶಾಸ್ತ್ರವು ಬದಲಾಗಲೇಬೇಕು.
13 ನಾವು ಕ್ರಿಸ್ತನನ್ನು ಕುರಿತು ಇವುಗಳನ್ನು ಹೇಳುತ್ತಿರುವೆವು. ಆತನು ಬೇರೊಂದು ಕುಲಕ್ಕೆ ಸೇರಿದವನು. ಆ ಕುಲದವರಲ್ಲಿ ಯಾರೇ ಆಗಲಿ ಎಂದೂ ಯಾಜಕರಾಗಿ ಸೇವೆ ಮಾಡಿರಲಿಲ್ಲ.
14 ನಮ್ಮ ಪ್ರಭು (ಕ್ರಿಸ್ತನು) ಯೆಹೂದಕುಲದಿಂದ ಬಂದವನೆಂಬುದು ಸ್ಪಷ್ಟವಾಗಿದೆ. ಆ ಕುಲಕ್ಕೆ ಸೇರಿದ ಯಾಜಕರನ್ನು ಕುರಿತು ಮೋಶೆಯು ಏನನ್ನೂ ಹೇಳಲಿಲ್ಲ.
15 ಮೆಲ್ಕಿಜೆದೇಕನಂತಹ ಮತ್ತೊಬ್ಬ ಯಾಜಕನು (ಯೇಸು) ಬಂದಿರುವುದರಿಂದ ಇವು ಮತ್ತಷ್ಟು ಸ್ಪಷ್ಟವಾಗಿವೆ.
16 ಆತನು ಯಾಜಕನಾದದ್ದು ವಂಶಾನುಗತವಾಗಿ ಬಂದ ನಿಯಮಗಳ ಮತ್ತು ಶಾಸ್ತ್ರಗಳ ಪ್ರಕಾರವಲ್ಲ. ಆತನು ನಾಶವಾಗದ ತನ್ನ ಜೀವಶಕ್ತಿಯಿಂದ ಯಾಜಕನಾದನು.
17 ಪವಿತ್ರ ಗ್ರಂಥದಲ್ಲಿ ಆತನನ್ನು ಕುರಿತು ಹೀಗೆ ಹೇಳಿದೆ: “ನೀನು ಮೆಲ್ಕಿಜೆದೇಕನಂತೆ ಸದಾಕಾಲವೂ ಯಾಜಕನಾಗಿರುವೆ.” [✡ಉಲ್ಲೇಖನ: ಕೀರ್ತನೆ. 110:4.]
18 ಹಳೆಯ ನಿಯಮವು ದುರ್ಬಲವೂ ನಿಷ್ಪ್ರಯೋಜಕವೂ ಆಗಿದ್ದರಿಂದ ರದ್ದಾಯಿತು.
19 ಮೋಶೆಯ ಧರ್ಮಶಾಸ್ತ್ರವು ಯಾವುದನ್ನೂ ಸಿದ್ಧಿಗೆ ತರಲಿಲ್ಲ. ಈಗ ನಮಗೆ ಉತ್ತಮವಾದ ಒಂದು ನಿರೀಕ್ಷೆಯನ್ನು ಕೊಡಲಾಗಿದೆ. ಈ ನಿರೀಕ್ಷೆಯು ನಮ್ಮನ್ನು ದೇವರ ಬಳಿಗೆ ಕೊಂಡೊಯ್ಯಬಲ್ಲದು.
20 ದೇವರು ಯೇಸುವನ್ನು ಪ್ರಧಾನಯಾಜಕನನ್ನಾಗಿ ಮಾಡಿದಾಗ, ಒಂದು ವಾಗ್ದಾನವನ್ನೂ ಮಾಡಿದನು. ಆದರೆ ಬೇರೆಯವರು ಯಾಜಕರಾದಾಗ ಆತನು ವಾಗ್ದಾನ ಮಾಡಲಿಲ್ಲ.
21 ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ: “ ‘ನೀನು ಸದಾಕಾಲವೂ ಯಾಜಕನಾಗಿರುವೆ’ ಎಂದು ಪ್ರಭುವೆಂಬ ನಾನು ವಾಗ್ದಾನ ಮಾಡಿದೆನು. ಇದಕ್ಕಾಗಿ ನಾನೆಂದಿಗೂ ಪಶ್ಚಾತ್ತಾಪಪಡುವುದಿಲ್ಲ.” ಕೀರ್ತನೆ 110:4]
22 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಶ್ರೇಷ್ಠವಾದ ಒಡಂಬಡಿಕೆಗೆ ಯೇಸುವೇ ಆಧಾರ ಎಂಬುದೇ ಇದರರ್ಥ.
23 ಇದಲ್ಲದೆ ಇತರ ಯಾಜಕರಲ್ಲಿ ಮರಣದ ಕಾರಣದಿಂದ ಒಬ್ಬನೇ ಶಾಶ್ವತವಾಗಿ ಯಾಜಕನಾಗಿ ಮುಂದುವರೆಯಲಾಗಲಿಲ್ಲ. ಆದ್ದರಿಂದ ಅಲ್ಲಿ ಅನೇಕ ಮಂದಿ ಯಾಜಕರಿದ್ದರು.
24 ಆದರೆ ಯೇಸು ಸದಾಕಾಲವೂ ಜೀವಿಸುವವನಾಗಿದ್ದಾನೆ. ಆತನು ತನ್ನ ಯಾಜಕ ಸೇವೆಯನ್ನು ಎಂದೆಂದಿಗೂ ನಿಲ್ಲಿಸುವುದಿಲ್ಲ.
25 ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.
26 ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.
27 ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
28 ಧರ್ಮಶಾಸ್ತ್ರವು ಮನುಷ್ಯರೊಳಗಿಂದ ಪ್ರಧಾನ ಯಾಜಕರನ್ನು ಆರಿಸುತ್ತದೆ. ಆರಿಸಲ್ಪಟ್ಟ ಈ ಜನರು ಮಾನವ ದೌರ್ಬಲ್ಯಗಳನ್ನು ಹೊಂದಿದವರಾಗಿದ್ದಾರೆ. ಆದರೆ ದೇವರು ಧರ್ಮಶಾಸ್ತ್ರದ ನಂತರ ಮಾಡಿದ ವಾಗ್ದಾನ ದೇವರ ಮಗನನ್ನು ಪ್ರಧಾನ ಯಾಜಕನನ್ನಾಗಿ ಮಾಡಿತು. ಆ ಮಗನು ಎಂದೆಂದಿಗೂ ಸರ್ವಸಂಪೂರ್ಣನಾಗಿ ಮಾಡಲ್ಪಟ್ಟಿದ್ದಾನೆ.
×

Alert

×