ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು.
ಅಬ್ರಹಾಮನು ಅವನಿಗೆ ತನ್ನಲ್ಲಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಸಾಲೇಮಿನ ರಾಜನಾದ ಮೆಲ್ಕಿಜೆದೇಕನೆಂಬ ಹೆಸರಿಗೆ ಎರಡು ಅರ್ಥಗಳಿವೆ. ಮೆಲ್ಕಿಜೆದೇಕನೆಂದರೆ, “ನೀತಿರಾಜ” ಎಂಬರ್ಥ. “ಸಾಲೇಮಿನ ರಾಜ”ನೆಂದರೆ “ಸಮಾಧಾನದ ರಾಜ” ಎಂದರ್ಥ.
ಮೆಲ್ಕಿಜೆದೇಕನ ತಂದೆತಾಯಿಗಳು ಯಾರೆಂಬುದಾಗಲಿ ಅವನು ಎಲ್ಲಿಂದ ಬಂದನೆಂಬುದಾಗಲಿ ಅವನು ಯಾವಾಗ ಹುಟ್ಟಿದನೆಂಬುದಾಗಲಿ ಅವನು ಯಾವಾಗ ಸತ್ತನೆಂಬುದಾಗಲಿ ಯಾರಿಗೂ ತಿಳಿದಿಲ್ಲ. ಅವನು ದೇವರ ಮಗನಂತೆ ಸದಾಕಾಲವೂ ಯಾಜಕನಾಗಿದ್ದಾನೆ.
ಲೇವಿಯಕುಲದ ಜನರಲ್ಲಿ ಯಾಜಕರಾಗುವವರು ಯೆಹೂದ್ಯರಿಂದ ಹತ್ತನೆಯ ಒಂದು ಭಾಗವನ್ನು ಪಡೆಯಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ಯಾಜಕರು ತಮ್ಮ ಸ್ವಂತ ಜನರಿಂದಲೇ (ಯೆಹೂದ್ಯರು) ಅದನ್ನು ಸಂಗ್ರಹಿಸುತ್ತಾರೆ ಮತ್ತು ಅವರ ಜನರು ಅಬ್ರಹಾಮನ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
ಮೆಲ್ಕಿಜೆದೇಕನು ಲೇವಿಯರ ಕುಲಕ್ಕೆ ಸೇರಿದವನಾಗಿರಲಿಲ್ಲ. ಆದರೆ ಅವನು ಹತ್ತನೆ ಒಂದು ಭಾಗವನ್ನು ಅಬ್ರಹಾಮನಿಂದ ಪಡೆದನು. ದೇವರ ವಾಗ್ದಾನಗಳನ್ನು ಹೊಂದಿದ್ದ ಅಬ್ರಹಾಮನನ್ನು ಅವನು ಆಶೀರ್ವದಿಸಿದನು.
ಯಾಜಕರು ಹತ್ತನೆಯ ಒಂದು ಭಾಗವನ್ನು ಪಡೆಯುತ್ತಾರೆ. ಆದರೆ ಅವರು ಸ್ವಲ್ಪಕಾಲ ಜೀವಿಸಿದ್ದು ನಂತರ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ಹತ್ತನೆಯ ಒಂದು ಭಾಗವನ್ನು ಪಡೆದ ಮೆಲ್ಕಿಜೆದೇಕನು ಜೀವಂತನಾಗಿಯೇ ಇರುತ್ತಾನೆಂದು ಪವಿತ್ರ ಗ್ರಂಥವು ಹೇಳುತ್ತದೆ.
ಲೇವಿಯರು ಜನರಿಂದ ಹತ್ತನೆಯ ಒಂದು ಭಾಗವನ್ನು ತೆಗೆದುಕೊಳ್ಳುತ್ತಾರೆ. ಆದರೆ ಅಬ್ರಹಾಮನು ಮೆಲ್ಕಿಜೆದೇಕನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನೆಂದರೆ, ಲೇವಿಯೂ ಕೊಟ್ಟಂತಾಯಿತೆಂದು ಹೇಳಬಹುದು.
ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.
ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ: “ ‘ನೀನು ಸದಾಕಾಲವೂ ಯಾಜಕನಾಗಿರುವೆ’ ಎಂದು ಪ್ರಭುವೆಂಬ ನಾನು ವಾಗ್ದಾನ ಮಾಡಿದೆನು. ಇದಕ್ಕಾಗಿ ನಾನೆಂದಿಗೂ ಪಶ್ಚಾತ್ತಾಪಪಡುವುದಿಲ್ಲ.” ಕೀರ್ತನೆ 110:4]
ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.
ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
ಧರ್ಮಶಾಸ್ತ್ರವು ಮನುಷ್ಯರೊಳಗಿಂದ ಪ್ರಧಾನ ಯಾಜಕರನ್ನು ಆರಿಸುತ್ತದೆ. ಆರಿಸಲ್ಪಟ್ಟ ಈ ಜನರು ಮಾನವ ದೌರ್ಬಲ್ಯಗಳನ್ನು ಹೊಂದಿದವರಾಗಿದ್ದಾರೆ. ಆದರೆ ದೇವರು ಧರ್ಮಶಾಸ್ತ್ರದ ನಂತರ ಮಾಡಿದ ವಾಗ್ದಾನ ದೇವರ ಮಗನನ್ನು ಪ್ರಧಾನ ಯಾಜಕನನ್ನಾಗಿ ಮಾಡಿತು. ಆ ಮಗನು ಎಂದೆಂದಿಗೂ ಸರ್ವಸಂಪೂರ್ಣನಾಗಿ ಮಾಡಲ್ಪಟ್ಟಿದ್ದಾನೆ.