ಆಗ ಮರಿಯಳು, ಬಹು ಬೆಲೆಬಾಳುವ ಸುಗಂಧತೈಲವನ್ನು ಅರ್ಧ ಲೀಟರಿನಷ್ಟು ತೆಗೆದುಕೊಂಡು ಬಂದು, ಯೇಸುವಿನ ಪಾದಗಳಿಗೆ ಹಚ್ಚಿದಳು. ಬಳಿಕ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರೆಸಿದಳು. ಆ ಪರಿಮಳದ್ರವ್ಯದ ಸುವಾಸನೆಯು ಇಡೀ ಮನೆಯನ್ನೇ ತುಂಬಿಕೊಂಡಿತು.
ಆದರೆ ಯೂದನಿಗೆ ಬಡವರ ಬಗ್ಗೆ ನಿಜವಾಗಿಯೂ ಚಿಂತೆಯಿರಲಿಲ್ಲ. ಅವನು ಕಳ್ಳನಾಗಿದ್ದುದರಿಂದ ಹಾಗೆ ಹೇಳಿದನು. ಶಿಷ್ಯಸಮುದಾಯಕ್ಕೋಸ್ಕರವಿದ್ದ ಹಣದ ಪೆಟ್ಟಿಗೆಯು ಅವನ ವಶದಲ್ಲಿತ್ತು. ಅವನು ಆಗಾಗ್ಗೆ ಆ ಪೆಟ್ಟಿಗೆಯಿಂದ ಹಣವನ್ನು ಕದ್ದುಕೊಳ್ಳುತ್ತಿದ್ದನು.
ಜನರು ಖರ್ಜೂರದ ಗರಿಗಳನ್ನು ತೆಗೆದುಕೊಂಡು ಯೇಸುವನ್ನು ಎದುರುಗೊಳ್ಳಲು ಹೋದರು. “ಆತನಿಗೆ ಸ್ತೋತ್ರವಾಗಲಿ! ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ದೇವರಾಶೀರ್ವಾದವಾಗಲಿ! ಇಸ್ರೇಲ್ ರಾಜನಿಗೆ ದೇವರಾಶೀರ್ವಾದವಾಗಲಿ!” ಕೀರ್ತನೆ 118:25-26 ಎಂದು ಜನರು ಕೂಗಿದರು.
ಯೇಸುವಿನ ಶಿಷ್ಯರು ಆ ಸಮಯದಲ್ಲಿ ಇದನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ಯೇಸು ಮಹಿಮಾಪದವಿಗೆ ಏರಿಹೋದ ನಂತರ, ಈ ಸಂಗತಿಗಳು ಆತನ ವಿಷಯವಾಗಿ ಬರೆಯಲ್ಪಟ್ಟಿವೆ ಎಂಬುದನ್ನು ಶಿಷ್ಯರು ಅರ್ಥಮಾಡಿಕೊಂಡರು; ಮತ್ತು ತಾವು ಆತನಿಗಾಗಿ ಮಾಡಿದ ಕಾರ್ಯಗಳನ್ನು ಜ್ಞಾಪಿಸಿಕೊಂಡರು.
ಯೇಸು ಲಾಜರನಿಗೆ ಸಮಾಧಿಯೊಳಗಿಂದ ಬರುವಂತೆ ಹೇಳಿ ಅವನನ್ನು ಜೀವಂತವಾಗಿ ಎಬ್ಬಿಸಿದಾಗ ಅನೇಕ ಜನರು ಯೇಸುವಿನ ಸಂಗಡ ಇದ್ದರು. ಯೇಸು ಮಾಡಿದ ಈ ಕಾರ್ಯದ ಬಗ್ಗೆ ಅವರು ಇತರರಿಗೆ ಹೇಳುತ್ತಿದ್ದರು.
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಗೋಧಿಯ ಕಾಳು ಭೂಮಿಗೆ ಬಿದ್ದು ಸಾಯಲೇಬೇಕು. ಬಳಿಕ ಅದು ಬೆಳೆದು ಅನೇಕ ಕಾಳುಗಳನ್ನು ಫಲಿಸುವುದು. ಸಾಯದಿದ್ದರೆ, ಅದು ಯಾವಾಗಲೂ ಕೇವಲ ಒಂದೇ ಕಾಳಾಗಿರುವುದು.
ತನ್ನ ಸ್ವಂತ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ಈ ಲೋಕದಲ್ಲಿ ತನ್ನ ಪ್ರಾಣವನ್ನು ದ್ವೇಷಿಸುವವನು ಅದನ್ನು ಉಳಿಸಿಕೊಳ್ಳುವನು. ಅವನು ನಿತ್ಯಜೀವವನ್ನು ಹೊಂದುವನು.
ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ತಂದೆಯೇ, ನನ್ನನ್ನು ಈ ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?؆ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.
ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೊ!” ಎಂದು ಹೇಳಿದನು. ಆಗ ಪರಲೋಕದಿಂದ, “ನನ್ನ ಹೆಸರನ್ನು ಮಹಿಮೆಪಡಿಸಿಕೊಂಡಿದ್ದೇನೆ. ನಾನು ಮತ್ತೆ ಮಹಿಮೆಪಡಿಸಿಕೊಳ್ಳುವೆನು” ಎಂಬ ವಾಣಿ ಆಯಿತು.
ಜನರು, “ಕ್ರಿಸ್ತನು ಸದಾಕಾಲ ಜೀವಿಸುತ್ತಾನೆ ಎಂದು ನಮ್ಮ ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ, ಮನುಷ್ಯಕುಮಾರನು ಮೇಲೆತ್ತಲ್ಪಡುವನು؆ ಎಂದು ನೀನು ಹೇಳುವುದೇಕೆ? ಈ ಮನುಷ್ಯಕುಮಾರನು ಯಾರು?” ಎಂದು ಕೇಳಿದರು.
ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.
ಆದ್ದರಿಂದ ನೀವು ಬೆಳಕನ್ನು ಇನ್ನೂ ಹೊಂದಿರುವಾಗಲೇ ಅದರಲ್ಲಿ ನಂಬಿಕೆ ಇಡಿರಿ. ಆಗ ನೀವು ಬೆಳಕಿನವರಾಗುವಿರಿ” ಎಂದು ಹೇಳಿದನು. ಈ ಸಂಗತಿಗಳನ್ನು ಹೇಳಿದ ಮೇಲೆ ಯೇಸು ಅಲ್ಲಿಂದ ಹೊರಟು, ತನ್ನನ್ನು ಜನರು ಕಂಡುಕೊಳ್ಳಲಾಗದ ಸ್ಥಳಕ್ಕೆ ಹೋದನು.
ಇದರಿಂದಾಗಿ, ಪ್ರವಾದಿಯಾದ ಯೆಶಾಯನು ಹೇಳಿದ್ದ ಮಾತುಗಳು ನೆರವೇರಿದವು. ಅದೇನೆಂದರೆ: “ಪ್ರಭುವೇ, ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಪ್ರಭುವಿನ ಬಾಹುಬಲವು ಯಾರಿಗೆ ಗೋಚರವಾಯಿತು?” ಯೆಶಾಯ 53:1
”ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.” ಯೆಶಾಯ 6:10
ಆದರೆ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅನೇಕ ಯೆಹೂದ್ಯನಾಯಕರು ಸಹ ಯೇಸುವಿನಲ್ಲಿ ನಂಬಿಕೆಯಿಟ್ಟರು. ಆದರೆ ಅವರು ಫರಿಸಾಯರಿಗೆ ಹೆದರಿಕೊಂಡು ತಮ್ಮ ನಂಬಿಕೆಯನ್ನು ಬಹಿರಂಗಪಡಿಸಲಿಲ್ಲ. ತಮ್ಮನ್ನು ಫರಿಸಾಯರು ಸಭಾಮಂದಿರದಿಂದ ಬಹಿಷ್ಕರಿಸುತ್ತಾರೆ ಎಂಬ ಭಯ ಅವರಿಗಿತ್ತು.
”ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ.