(ಮತ್ತಾಯ 28:1-10; ಮಾರ್ಕ 16:1-8; ಲೂಕ 24:1-12) ಭಾನುವಾರದ ಮುಂಜಾನೆ ಮಗ್ದಲದ ಮರಿಯಳು ಯೇಸುವಿನ ದೇಹವಿದ್ದ ಸಮಾಧಿಯ ಬಳಿಗೆ ಬಂದಳು. ಆಗ ಇನ್ನೂ ಕತ್ತಲಿತ್ತು. ಸಮಾಧಿಯ ಬಾಗಿಲಿಗೆ ಮುಚ್ಚಿದ್ದ ದೊಡ್ಡ ಕಲ್ಲು ಅಲ್ಲಿಂದ ತೆಗೆದುಹಾಕಲ್ಪಟ್ಟಿರುವುದನ್ನು ಕಂಡ ಮರಿಯಳು
ಸೀಮೋನ್ ಪೇತ್ರನ ಮತ್ತು (ಯೇಸು ಪ್ರೀತಿಸುತ್ತಿದ್ದ) ಮತ್ತೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಅವರು ಸಮಾಧಿಯೊಳಗಿಂದ ಪ್ರಭುವನ್ನು ತೆಗೆದುಕೊಂಡಿದ್ದಾರೆ, ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲ” ಎಂದು ಹೇಳಿದಳು.
ದೇವದೂತರು ಮರಿಯಳಿಗೆ, “ಅಮ್ಮಾ, ಏಕೆ ಅಳುತ್ತಿರುವೆ?” ಎಂದು ಕೇಳಿದರು. ಮರಿಯಳು, “ನನ್ನ ಪ್ರಭುವಿನ ದೇಹವನ್ನು ಕೆಲವು ಜನರು ತೆಗೆದುಕೊಂಡು ಹೋಗಿದ್ದಾರೆ. ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟಳು.
ಯೇಸು ಆಕೆಯನ್ನು “ಅಮ್ಮಾ ಏಕೆ ಅಳುತ್ತಿರುವೆ? ನೀನು ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಿದನು. ಇವನು ತೋಟವನ್ನು ನೋಡಿಕೊಳ್ಳುವವನಿರಬಹುದೆಂದು ಮರಿಯಳು ಯೋಚಿಸಿಕೊಂಡು ಅವನಿಗೆ, “ಅಯ್ಯಾ, ನೀನು ಯೇಸುವನ್ನು ತೆಗೆದುಕೊಂಡು ಹೋದೆಯಾ? ಆತನನ್ನು ಎಲ್ಲಿಟ್ಟಿರುವೆ, ನನಗೆ ಹೇಳು. ನಾನು ಹೋಗಿ ಆತನನ್ನು ತೆಗೆದು ಕೊಳ್ಳುತ್ತೇನೆ” ಎಂದು ಹೇಳಿದಳು.
ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.
(ಮತ್ತಾಯ 28:16-20; ಮಾರ್ಕ 16:14-18; ಲೂಕ 24:36-49) ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.
ಉಳಿದ ಶಿಷ್ಯರು ತೋಮನಿಗೆ, “ನಾವು ಪ್ರಭುವನ್ನು ನೋಡಿದೆವು” ಎಂದು ಹೇಳಿದರು. ಆದರೆ ತೋಮನು, “ಆತನ ಕೈಗಳಲ್ಲಿರುವ ಮೊಳೆಯ ಗಾಯದ ಗುರುತುಗಳನ್ನು ನಾನು ನೋಡುವವರೆಗೆ, ಮೊಳೆಗಳನ್ನು ಜಡಿದಿದ್ದ ಸ್ಥಳದಲ್ಲಿ ನನ್ನ ಬೆರಳನ್ನಿಡುವವರೆಗೆ ಮತ್ತು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟುನೋಡುವವರೆಗೆ ನಾನು ಅದನ್ನು ನಂಬುವುದಿಲ್ಲ” ಎಂದು ಹೇಳಿದನು.
ಒಂದು ವಾರದ ನಂತರ ಶಿಷ್ಯರು ಮನೆಯೊಂದರಲ್ಲಿ ಒಟ್ಟಾಗಿ ಸೇರಿದ್ದರು. ತೋಮನು ಅವರೊಂದಿಗೆ ಇದ್ದನು. ಬಾಗಿಲುಗಳನ್ನು ಮುಚ್ಚಲಾಗಿತ್ತು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.