ಕೆಲವು ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯಾರೆಂದರೆ, ಸೀಮೋನ್ ಪೇತ್ರ, ದಿದುಮನೆಂಬ ತೋಮ, ಗಲಿಲಾಯಕ್ಕೆ ಸೇರಿದ ಕಾನಾ ಊರಿನವನಾದ ನತಾನಿಯೇಲ, ಜೆಬೆದಾಯನ ಇಬ್ಬರು ಗಂಡುಮಕ್ಕಳು ಮತ್ತು ಇನ್ನಿಬ್ಬರು ಶಿಷ್ಯರು.
ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತಿದ್ದೇನೆ” ಎಂದನು. ಉಳಿದ ಶಿಷ್ಯರು, “ನಾವೂ ನಿನ್ನೊಂದಿಗೆ ಬರುತ್ತೇವೆ” ಎಂದು ಹೇಳಿದರು. ಅಂತೆಯೇ ಶಿಷ್ಯರೆಲ್ಲಾ ಹೊರಟು ದೋಣಿಯನ್ನು ಹತ್ತಿದರು. ಅವರು ರಾತ್ರಿಯೆಲ್ಲಾ ಬಲೆ ಬೀಸಿದರೂ ಒಂದು ಮೀನೂ ಸಿಗಲಿಲ್ಲ.
ಯೇಸು, “ನಿಮ್ಮ ದೋಣಿಯ ಬಲಭಾಗದಲ್ಲಿ ನಿಮ್ಮ ಬಲೆ ಬೀಸಿರಿ. ಅಲ್ಲಿ ಕೆಲವು ಮೀನುಗಳು ಸಿಕ್ಕುತ್ತವೆ” ಎಂದು ಹೇಳಿದನು. ಶಿಷ್ಯರು ಹಾಗೆಯೇ ಮಾಡಿದರು. ಬಹಳ ಮೀನುಗಳು ಸಿಕ್ಕಿಕೊಂಡದ್ದರಿಂದ ಅವರು ಬಲೆಯನ್ನು ದೋಣಿಯೊಳಗೆ ಎಳೆದುಕೊಳ್ಳಲಾಗಲಿಲ್ಲ.
ಯೇಸುವಿನ ಪ್ರೀತಿಯ ಶಿಷ್ಯನು ಪೇತ್ರನಿಗೆ, “ಆ ಮನುಷ್ಯನು ಪ್ರಭುವೇ!” ಎಂದು ಹೇಳಿದನು. ಕೂಡಲೇ ಪೇತ್ರನು ತನ್ನ ಅಂಗಿಯನ್ನು ಹಾಕಿಕೊಂಡು, ನೀರಿಗೆ ಧುಮುಕಿದನು. (ಪೇತ್ರನು ಮೀನು ಹಿಡಿಯುವುದಕ್ಕಾಗಿ ತನ್ನ ಅಂಗಿಯನ್ನು ಬಿಚ್ಚಿಟ್ಟಿದ್ದನು.)
ಉಳಿದ ಶಿಷ್ಯರು ದೋಣಿಯಲ್ಲಿ ತೀರಕ್ಕೆ ಹೋದರು. ಅವರು ಬಲೆತುಂಬ ಮೀನುಗಳನ್ನು ದಡಕ್ಕೆ ಎಳೆದುಕೊಂಡು ಹೋದರು. ಅವರು ದಡದಿಂದ ಬಹುದೂರದಲ್ಲೇನೂ ಇರಲಿಲ್ಲ. ಕೇವಲ ಮುನ್ನೂರು ಅಡಿಗಳಷ್ಟು ದೂರದಲ್ಲಿದ್ದರು.
ಸೀಮೋನ್ ಪೇತ್ರನು ದೋಣಿಯೊಳಕ್ಕೆ ಹೋಗಿ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದನು. ಬಲೆಯು ದೊಡ್ಡ ಮೀನುಗಳಿಂದ ತುಂಬಿತ್ತು. ಅದರಲ್ಲಿ 153 ಮೀನುಗಳಿದ್ದವು. ಅವು ಬಹಳ ಭಾರವಾಗಿದ್ದರೂ ಬಲೆಯು ಹರಿದುಹೋಗಲಿಲ್ಲ.
ಅವರು ಊಟಮಾಡಿದ ಮೇಲೆ, ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ಇಲ್ಲಿರುವ ಇವರು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಪೇತ್ರನು, “ಹೌದು ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಮರಿಗಳನ್ನು [*ಕುರಿಮರಿಗಳನ್ನು ಅಂದರೆ ಯೇಸುವಿನ ಹಿಂಬಾಲಕರು.] ಮೇಯಿಸು” ಎಂದನು.
ಎರಡನೆಯ ಸಾರಿ ಯೇಸು ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಪೇತ್ರನು, “ಹೌದು, ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಕಾಯಿ” ಎಂದನು.
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.
ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನೀನು ಯೌವನಸ್ಥನಾಗಿದ್ದಾಗ, ನಡುಕಟ್ಟಿಕೊಂಡು ನಿನಗೆ ಇಷ್ಟವಾದ ಕಡೆಗೆಲ್ಲಾ ಹೋದೆ. ಆದರೆ ನೀನು ಮುದುಕನಾದಾಗ, ನಿನ್ನ ಕೈಗಳನ್ನು ಚಾಚುವೆ ಮತ್ತು ಬೇರೊಬ್ಬನು ನಿನ್ನ ನಡುಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ನಡೆಸಿಕೊಂಡು ಹೋಗುವನು” ಎಂದು ಹೇಳಿದನು.
ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿನ ಪ್ರೀತಿಯ ಶಿಷ್ಯನು ತಮ್ಮ ಹಿಂದೆ ನಡೆದುಕೊಂಡು ಬರುತ್ತಿರುವುದನ್ನು ಕಂಡನು. (ರಾತ್ರಿಭೋಜನದ ಸಮಯದಲ್ಲಿ ಯೇಸುವಿನ ಎದೆಯ ಕಡೆಗೆ ಬಾಗಿ, “ಪ್ರಭುವೇ, ನಿನಗೆ ದ್ರೋಹ ಮಾಡುವವನು ಯಾರು?” ಎಂದು ಕೇಳಿದ ಶಿಷ್ಯನೇ ಇವನು.)
ಆದ್ದರಿಂದ ಸಹೋದರರ (ಶಿಷ್ಯರ) ಮಧ್ಯೆ ಒಂದು ಕಥೆಯೇ ಹರಡಿಕೊಂಡಿತು. ಯೇಸುವಿನ ಪ್ರೀತಿಯ ಈ ಶಿಷ್ಯನು ಸಾಯುವುದಿಲ್ಲವೆಂದು ಅವರು ಹೇಳುತ್ತಿದ್ದರು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಹೇಳಲಿಲ್ಲ. “ನಾನು ಬರುವ ತನಕ ಅವನು ಜೀವದಿಂದ ಇರಬೇಕೆಂಬುದು ನನ್ನ ಇಷ್ಟವಾಗಿದ್ದರೆ ಅದರಿಂದ ನಿನಗೇನು?” ಎಂದಷ್ಟೇ ಆತನು ಹೇಳಿದ್ದನು.