ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.” ಕೀರ್ತನೆ. 51:4
ದೇವರು ನ್ಯಾಯವಂತನೆಂಬುದನ್ನು ನಾವು ಮಾಡುವ ತಪ್ಪು ಮತ್ತಷ್ಟು ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಹೀಗಿರಲು, ದೇವರು ನಮ್ಮನ್ನು ಶಿಕ್ಷಿಸುವಾಗ, ಆತನು ಅನ್ಯಾಯ ಮಾಡುತ್ತಿದ್ದಾನೆಂದು ನಾವು ಹೇಳಲು ಸಾಧ್ಯವೇ? (ಬೇರೆ ಕೆಲವು ಜನರಿಗೆ ಇರಬಹುದಾದ ಆಲೋಚನೆಯನ್ನೇ ನಾನು ಇಲ್ಲಿ ಹೇಳುತ್ತಿದ್ದೇನೆ.)
“ನಾನಾಡುವ ಸುಳ್ಳು ದೇವರ ಸತ್ಯವನ್ನು ತೋರಿಸುವುದಾದರೆ ನನ್ನ ಸುಳ್ಳಿನಿಂದ ದೇವರಿಗೆ ನಿಜವಾಗಿಯೂ ಮಹಿಮೆಯಾಗುತ್ತದೆ. ಹೀಗಿರಲು ನನಗೆ ‘ಪಾಪಿ’ ಎಂಬ ತೀರ್ಪಾಗುವುದೇಕೆ?” ಎಂದು ಒಬ್ಬನು ಕೇಳಬಹುದು.
“ಒಳ್ಳೆಯದಾಗುವಂತೆ ನಾವು ಕೇಡುಮಾಡೋಣ” ಎಂದು ಹೇಳುವುದಕ್ಕೂ ಅದಕ್ಕೂ ಯಾವ ವ್ಯತ್ಯಾಸವಿಲ್ಲ. ಅನೇಕ ಜನರು ನಮ್ಮನ್ನು ಟೀಕಿಸುತ್ತಾರೆ ಮತ್ತು ನಾವು ಅಂಥ ಸಂಗತಿಗಳನ್ನು ಬೋಧಿಸುತ್ತೇವೆ ಎಂದು ಹೇಳುತ್ತಾರೆ. ಆ ಜನರು ತಪ್ಪಿತಸ್ಥರಾಗಿದ್ದಾರೆ. ಅವರಿಗೆ ದಂಡನೆಯಾಗಲೇಬೇಕು.
ಹೀಗಿರಲು, ಯೆಹೂದ್ಯರಾದ ನಾವು ಬೇರೆಯವರಿಗಿಂತ ಉತ್ತಮರಾಗಿದ್ದೇವೋ? ಇಲ್ಲ! ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವಿಲ್ಲವೆಂದು ಆಗಲೇ ನಿರೂಪಿಸಿದ್ದೇನೆ. ಅವರೆಲ್ಲರೂ ಪಾಪಮಾಡಿ ಅಪರಾಧಿಗಳಾಗಿದ್ದಾರೆ.
“ಜನರ ಬಾಯಿಗಳು ತೆರೆದ ಸಮಾಧಿಗಳಂತಿವೆ. ಅವರು ಸುಳ್ಳು ಹೇಳಲು ತಮ್ಮ ನಾಲಿಗೆಗಳನ್ನು ಬಳಸುತ್ತಾರೆ.” ಕೀರ್ತನೆ. 5:9 “ಅವರು ಹೇಳುವ ಸಂಗತಿಗಳು ವಿಷಪೂರಿತವಾದ ಹಾವುಗಳಂತಿವೆ.” ಕೀರ್ತನೆ. 140:3
ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.
ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ.
ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವರವಾದ ಕೃಪೆಯಿಂದಲೇ. ದೇವರು ಯೇಸು ಕ್ರಿಸ್ತನ ಮೂಲಕವಾಗಿ ಜನರನ್ನು ಪಾಪದಿಂದ ಬಿಡುಗಡೆ ಮಾಡಿ, ನೀತಿವಂತರನ್ನಾಗಿ ಮಾಡುತ್ತಾನೆ.
ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.
ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ.